ಸೆ. 3 ರಿಂದ 5 ರಾಜ್ಯ ಅಥ್ಲೆಟಿಕ್ಸ್ ಚಾಂಪಿಯನ್‌ಷಿಪ್
ಸ್ಪೋರ್ಟ್ಸ್ ಮೇಲ್ ವರದಿ
ಕರ್ನಾಟಕ ರಾಜ್ಯ ಅಥ್ಲೆಟಿಕ್ಸ್ ಸಂಸ್ಥೆ ಹಾಗೂ ಮೂಡಬಿದಿರೆ ಆಳ್ವಾಸ್ ಶಿಕ್ಷಣ ಸಂಸ್ಥೆಗಳ ಆಶ್ರಯದಲ್ಲಿ ಕರ್ನಾಟಕ ರಾಜ್ಯ ಜೂನಿಯರ್ ಹಾಗೂ ಸೀನಿಯರ್ ಅಥ್ಲೆಟಿಕ್ಸ್ ಚಾಂಪಿಯನ್‌ಷಿಪ್ ಸೆ. 3 ರಿಂದ 5 ವರೆಗೆ ಆಳ್ವಾಸ್ ವಿದ್ಯಾನಗರಿಯಲ್ಲಿರುವ ಸ್ವರಾಜ್ ಮೈದಾನದಲ್ಲಿ ನಡೆಯಲಿದೆ.
ಕರ್ನಾಟಕ ರಾಜ್ಯ ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ಅವರು ಕ್ರೀಡಾಕೂಟಕ್ಕೆ ಚಾಲನೆ ನೀಡುವರು. ಉದ್ಘಾಟನಾ ಸಮಾರಂಭದ ಅಧ್ಯಕ್ಷತೆಯನ್ನು ಮೂಡಬಿದಿರೆ ಶಾಸಕ ಉಮಾಕಾಂತ್ ಕೋಟ್ಯಾನ್ ಅವರು ವಹಿಸುವರು. ಮಾಜಿ ಸಚಿವ ಅಭಯಚಂದ್ರ ಜೈನ್ ಅವರು ಧ್ವಜಾರೋಹಣ ನೆರವೇರಿಸುವರು. ರಾಜ್ಯ ನಗರಾಭಿವೃದ್ಧಿ ಸಚಿವ ಯು.ಟಿ. ಖಾದರ್, ಕರ್ನಾಟಕ ಸರಕಾರ ಹೆಚ್ಚುವರಿ ಕಾರ್ಯದರ್ಶಿ ರಾಜೇಶ್ ಗೋಯಲ್, ಮಂಗಳೂರು ವಿಶ್ವವಿದ್ಯಾನಿಲಯದ ಹಂಗಾಮಿ ಉಪಕುಲಪತಿ ಡಾ. ಕಿಶೋರ್ ಕುಮಾರ್ ಸಿ.ಕೆ., ಮಾಜಿ ಸಚಿವ ಕೆ. ಅಮರನಾಥ ಶೆಟ್ಟಿ ಹಾಗೂ ಮೂಡಬಿದಿರೆ ನಗರ ಪಾಲಿಕೆ ಅಧ್ಯಕ್ಷೆ ಹರಿಣಾಕ್ಷಿ ಸುವರ್ಣ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುವರು.
ಸೆ. ೫ರಂದು ನಡೆಯುವ ಸಮಾರೋಪ ಸಮಾರಂಭದಲ್ಲಿ ಮಾಜಿ ಸಚಿವ ಕೆ. ಅಭಯಚಂದ್ರ ಜೈನ್ ಅಧ್ಯಕ್ಷತೆ ವಹಿಸುವರು. ಮಂಗಳೂರು ವಿಶ್ವವಿದ್ಯಾನಿಲಯದ ಹಂಗಾಮಿ ಉಪಕುಲಪತಿ ಡಾ. ಕಿಶೋರ್ ಕುಮಾರ್ ಸಿ.ಕೆ. ವಿಜೇತರಿಗೆ ಬಹುಮಾನ ವಿತರಿಸುವರು. ಕರ್ನಾಟಕ ರಾಜ್ಯ ಮಾಜಿ ಸಚಿವ ಕೆ. ಅಮರನಾಥ ಶೆಟ್ಟಿ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುವರು.
ಕಾರ್ಯಕ್ರಮದಲ್ಲಿ ರಾಜ್ಯ ಅಥ್ಲೆಟಿಕ್ಸ್ ಸಂಸ್ಥೆಯ ಕಾರ್ಯದರ್ಶಿ ಎ.ರಾಜವೇಲು, ಕರ್ನಾಟಕ ಅಥ್ಲೆಟಿಕ್ಸ್ ಸಂಸ್ಥೆಯ ಅಧ್ಯಕ್ಷ ಸುನಿಲ್ ಕುಮಾರ್ ಶೆಟ್ಟಿ ಹಾಗೂ ಆಳ್ವಾಸ್ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಡಾ. ಮೋಹನ್ ಆಳ್ವಾ ಕಾರ್ಯಕ್ರಮದಲ್ಲಿ ಉಪಸ್ಥಿತರಿರುವರು.